ಚಿತ್ರದುರ್ಗ: ಪ್ರತಿಯೊಬ್ಬರು ಶುದ್ಧ ಕುಡಿಯುವ ನೀರು ಸೇವಿಸಬೇಕು. ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಚತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮನವಿ ಮಾಡಿದರು.
ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಕುರಿತು ಜನಜಾಗೃತಿ ಸಪ್ತಾಹದ ಅಂಗವಾಗಿ ಪಂಜಿನ ಮೆರಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪರಿಸರ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಜನರು ಶುದ್ಧವಾದ ಕುಡಿಯುವ ನೀರು ಸೇವಿಸಬೇಕು ಎಂದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಕುಡಿಯುವ ನೀರು ಮತ್ತು ವೈಯಕ್ತಿಕ ಸ್ವಚ್ಛತೆಯ ಕುರಿತು ಜಿಲ್ಲೆಯ ಜನರಿಗೆ ಸಪ್ತಾಹದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ವಿನೂತನ ಕಾರ್ಯಕ್ರಮಗಳ ಮೂಲಕ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಜಿಲ್ಲೆಯ ಜನರು ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬೇಕು ಎಂಬುದು ಸಪ್ತಾಹದ ಉದ್ದೇಶವಾಗಿದೆ ಎಂದರು.
ನಾವು ಕುಡಿಯುವ ನೀರು ಶುದ್ಧವಾಗಿರಬೇಕು. ಯಾವುದೇ ಕಲುಷಿತ ನೀರು ಸೇರದೇ ಇರುವ ರೀತಿಯಲ್ಲಿ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ನೀರು ಕಲುಷಿತವಾದರೆ ಹಲವು ರೋಗ-ರುಜಿನಗಳಿಗೆ ತುತ್ತಾಗುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಜನರು ಕಾಯಿಸಿ, ಕುದಿಸಿ, ಆರಿಸಿದ ನೀರನ್ನು ಕುಡಿಯುವ ಅಭ್ಯಾಸ ರೂಢಿಸಿಕೊಳ್ಳಬೇಕು. ಇದರ ಜೊತೆಗೆ ನಮ್ಮ ಸುತ್ತಲಿನ ಪರಿಸರವನ್ನೂ ಸ್ವಚ್ಛವಾಗಿಟ್ಟುಕೊಳ್ಳಲು ಹೆಚ್ಚಿನ ಗಮನಹರಿಸಬೇಕು ಎಂದು ಮನವಿ ಮಾಡಿದರು.
ನಗರದ ಒನಕೆ ಓಬವ್ವ ವೃತ್ತದಿಂದ ಪ್ರಾರಂಭವಾದ ಪಂಜಿನ ಮೆರವಣಿಗೆಯು ಮದಕರಿ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಬಿ.ಡಿ.ರಸ್ತೆಯಲ್ಲಿ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಹನುಮಂತಪ್ಪ, ಶಿಶುಅಭಿವೃದ್ಧಿ ಯೋಜನಾಧಿಕಾರಿ ಲೋಕೇಶ್ವರಪ್ಪ, ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಸಹಾಯಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಮತ್ತಿತರರು ಇದ್ದರು.