ಚಿತ್ರದುರ್ಗ: ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದಿಂದ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್ಗಳ ಸಹಯೋಗದಿಂದ ಆರ್ಯ ವೈಶ್ಯ ಅಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗಳು ಅನುಷ್ಟಾನಗೊಂಡಿದ್ದು, ಅರ್ಜಿ ಸಲ್ಲಿಸಲು ಬಯಸುವವರು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ “ಜಿ”ಯಲ್ಲಿ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.) ಅರ್ಜಿ ಸಲ್ಲಿಸಬಯಸುವವರು ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸವನ್ನು ಹಾಗೂ ಎಲ್ಲಾ ವಿವರಗಳನ್ನು kacdc.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ 9448451111 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.