ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಇಂದು ಸೋಮವಾರ (ಜುಲೈ 3) ಆರಂಭವಾಗಲಿದೆ. 10 ದಿನಗಳ ಕಲಾಪ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಲಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಐದು ‘ಗ್ಯಾರಂಟಿ’ಗಳ ಅನುಷ್ಠಾನದಲ್ಲಿ ಗೊಂದಲ, ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ ರದ್ದತಿಗೆ ಮಸೂದೆ ಮಂಡನೆ ಮತ್ತಿತರ ವಿಚಾರಗಳು ಉಭಯ ಸದನಗಳಲ್ಲಿ ಪ್ರತಿಧ್ವನಿಸಲಿವೆ. ಮಧ್ಯಾಹ್ನ 12 ಗಂಟೆಗೆ ವಿಧಾನಸಭೆಯ ಸಭಾಂಗಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅವರು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆ ಮೂಲಕ, ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನಕ್ಕೆ ಚಾಲನೆ ಸಿಗಲಿದೆ.
ಹೊಸ ಸರ್ಕಾರದ ಮುನ್ನೋಟ, ಅಭಿವೃದ್ಧಿ ಯೋಜನೆಗಳ ಜತೆಗೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ವಾಗ್ದಾನ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ. ಜುಲೈ 4ರಿಂದ ಪ್ರಶ್ನೋತ್ತರ, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಸೇರಿದಂತೆ ಕಾರ್ಯಕಲಾಪಗಳು ನಡೆಯಲಿವೆ. ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಮಂಡಿಸಲಿದ್ದಾರೆ. ಆಯವ್ಯಯದ ಗಾತ್ರ ಹೆಚ್ಚಾಗಲಿದೆ ಎಂಬ ಸುಳಿವನ್ನು ಈಗಾಗಲೇ ಮುಖ್ಯಮಂತ್ರಿ ನೀಡಿರುವುದರಿಂದ, ಈ ಬಜೆಟ್‍ನಲ್ಲಿ ಐದು ‘ಗ್ಯಾರಂಟಿ’ಗಳಿಗೆ ಆರ್ಥಿಕ ಸಂಪನ್ಮೂಲ ಒದಗಿಸುವ ಬಗ್ಗೆ ಪ್ರಸ್ತಾಪಿಸುವ ನಿರೀಕ್ಷೆಯಿದೆ.
				
															
                    
                    
                    
                    
                    































