ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 29 ರಿಂದ ಸೆ.1 ರ ವರೆಗೆ ನಾಲ್ಕು ದಿನ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ 14 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೀದರ್, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು, ಮೈಸೂರು, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುವ ಸೂಚನೆ ನೀಡಲಾಗಿದೆ.
ಆಗಸ್ಟ್ 30 ರಂದು ಚಿಕ್ಕಮಗಳೂರು, ಚಾಮರಾಜನಗರ, 31 ರಂದು ಬಳ್ಳಾರಿ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಸೆ.1 ರಂದು ರಾಯಚೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಸೂಚನೆ ನೀಡಲಾಗಿದೆ.
ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಮಳೆ ಕಣ್ಮರೆಯಾಗಿತ್ತು. ಇದೀಗ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಸೂಚನೆ ನೀಡಿದೆ.