ಮೈಸೂರು: ಗೃಹ ಸಚಿವ ಅಮಿತ್ ಅವರು ಒಂದು ದಿನದ ರಾಜ್ಯ ಪ್ರವಾಸದ ಭಾಗವಾಗಿ ಶನಿವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಶನಿವಾರ ರಾತ್ರಿ 10.50ಕ್ಕೆ ದೆಹಲಿಯಿಂದ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಶಾ, ಅಲ್ಲಿಂದ ರಸ್ತೆ ಮಾರ್ಗವಾಗಿ ಮೈಸೂರಿನ ರ್‍ಯಾಡಿಸನ್ ಬ್ಲ್ಯೂ ಹೊಟೆಲ್‌ಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ.
ಬಳಿಕ ಭಾನುವಾರ ಬೆಳಗ್ಗೆ 11ಗಂಟೆಯ ಸುಮಾರಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲಿದ್ದಾರೆ. ಅಲ್ಲಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಸುತ್ತೂರಿಗೆ ಭೇಟಿ ನೀಡಲಿದ್ದು, ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ1.30ಕ್ಕೆ ಸುತ್ತೂರು ಮಠದಲ್ಲಿ ಊಟ ಮಾಡಿ ಅಲ್ಲಿಂದ ಮೈಸೂರಿಗೆ ವಾಪಸ್ ಆಗಲಿದ್ದಾರೆ. ನಂತರ ಮಧ್ಯಾಹ್ನ 2.30 ರಿಂದ ರ್‍ಯಾಡಿಸನ್ ಹೋಟೆಲ್‌ನಲ್ಲಿ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿರುವ ಅಮಿತ್ ಶಾ ಅವರು, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಾಹಿತಿ ಸಂಗ್ರಹಿಸಲಿದ್ದಾರೆಂದೂ ಬಿಜೆಪಿ ಆಪ್ತ ಮೂಲಗಳಿಂದ ತಿಳಿದು ಬಂದಿದೆ.