ಉಡುಪಿ: ಕರಾವಳಿ ಸಹಿತ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯಾರು ಏನು ಬೇಕಾದ್ರೂ ಮಾಡಬಹುದು ಎಂಬ ವಾತಾವರಣ ಸೃಷ್ಟಿಯಾಗಿದೆ. ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ರಾಜಕಾರಣದ ಪರಿಣಾಮವನ್ನು ರಾಜ್ಯದ ಜನತೆ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಹಲ್ಲೆ ಮಾಡಿರುವ ಪ್ರಕರಣ, ಹುಬ್ಬಳಿಯಲ್ಲಿ ನಡೆದ ಕೊಲೆ ಪ್ರಕರಣದಂತಹ ಅನೇಕ ಪ್ರಕರಣಗಳು ಕಳೆದ ಎರಡು ಮೂರು ತಿಂಗಳಿನಿಂದ ನಡೆಯುತ್ತಿದೆ. ರಾಜ್ಯದಲ್ಲಿ ಚುನಾಯಿತ ಸರಕಾರ ಇದೆ ಎನ್ನುವುದನ್ನೇ ಜನರು ಮರೆತಿದ್ದಾರೆ. ಸರಕಾರ ಹಾಗೂ ಪೊಲೀಸ್ ಅಧಿಕಾರಿಗಳ ವೈಫಲ್ಯತೆ ಎದ್ದು ಕಾಣುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
