ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮುಮ್ತಾಜ್ ಅಲಿ ಅವರನ್ನು ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಮುಮ್ತಾಜ್ ಅಲಿ ಅವರ ಸಹೋದರ ಹೈದರ್ ಅಲಿ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯನ್ನು ಬಳಸಿಕೊಂಡು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶುಐಬ್, ಸತ್ತಾರ್, ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನನ್ನ ಸಹೋದರ ಮುಮ್ತಾಜ್ ಅಲಿ ಸಮಾಜದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿದ್ದು, ಕಳೆದ 30 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿದ್ದರು. ಸಮಾಜ ಸೇವೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಹಲವು ಧಾರ್ಮಿಕ ಸಂಸ್ಥೆಗಳ ಮುಖ್ಯಸ್ಥರಾಗಿದ್ದು, ಅವರ ಜನಪ್ರಿಯತೆಯನ್ನು ಹಾಳು ಮಾಡುವ ಉದ್ದೇಶದಿಂದ ಆರೋಪಿಗಳೆಲ್ಲರೂ ಸೇರಿಕೊಂಡು ಅವರು ಆತ್ಮಹತ್ಯೆಗೆ ಶರಣಾಗುವಂತೆ ಪ್ರಚೋದನೆ ನೀಡಿದ್ದಾರೆ ಎಂದು ಹೈದರ್ ಅಲಿ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಗಳ ಪೈಕಿ ರೆಹಮತ್ ಎಂಬವರು ಅಕ್ರಮ ಸಂಬಂಧ ಇದೆ ಎಂದು ಸುಳ್ಳು ಪ್ರಚಾರ ಮಾಡಿ ಹೆಸರನ್ನು ಹಾಳು ಮಾಡುತ್ತೇನೆ ಎಂದು ಹೆದರಿಸಿ 2024 ರ ಜುಲೈಯಿಂದ ಇದುವರೆಗೂ 50 ಲಕ್ಷ ರೂ.ಗಿಂತಲು ಅಧಿಕ ಮೊತ್ತವನ್ನು ವಸೂಲಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಬೆದರಿಸಿ 25 ಲಕ್ಷ ರೂ. ಹಣವನ್ನು ಚೆಕ್ ಮೂಲಕ ಪಡೆದುಕೊಂಡಿದ್ದಾರೆ ಎಂದು ಹೈದರ್ ಅಲಿ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
