ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್ ನೇತೃತ್ವದಲ್ಲಿ ಈಗಾಗಲೇ ಒಗ್ಗಟ್ಟು ಪ್ರದರ್ಶಿಸಿರುವ ಪ್ರತಿಪಕ್ಷಗಳು ಜೂನ್ 23ರಂದು ಸಭೆ ಸೇರಲಿವೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಇರಾದೆಯನ್ನು ಈ ಪ್ರತಿಪಕ್ಷಗಳು ಹೊಂದಿವೆ.
ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಜೊತೆಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸಭೆಯಲ್ಲಿ ಪಾಲ್ಗೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಬಿಜೆಪಿ ವಿರೋಧಿ ಮೈತ್ರಿಕೂಟ ರಚನೆಗೆ ಕಾರ್ಯತಂತ್ರ ರೂಪಿಸುವ ಸಭೆಗೆ ಪಕ್ಷಗಳು ತಮ್ಮ ಮುಖ್ಯಸ್ಥರನ್ನು ಹೊರತುಪಡಿಸಿ ಯಾವುದೇ ನಾಯಕರನ್ನು ಕಳುಹಿಸುವುದನ್ನು ವಿರೋಧಿಸುವುದಾಗಿ ನಿತೀಶ್ ಕುಮಾರ್ ಇತ್ತೀಚೆಗೆ ಹೇಳಿದ್ದರು.