ಮೈಸೂರು : ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನೆ ಮಾಡಿ ಮಾತನಾಡಿ, ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ ಎಂದರು.
ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ ಎಂದರು.ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.
ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು:
ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ತಮ್ಮ ಕಾಲೇಜು ದಿನಗಳನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.
 
				 
         
         
         
															 
                     
                     
                    


































 
    
    
        