ಧಾರವಾಡ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಧಾರವಾಡ ಹೈಕೋರ್ಟ್ ರಿಲೀಫ್ ನೀಡಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜೆ.ಪಿ.ನಡ್ಡಾ ಅವರ ಮೇಲೆ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಚುನಾವಣಾ ಪ್ರಚಾರದ ವೇಳೆ ನಡ್ಡಾ ಅವರು ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಸರ್ಕಾರಿ ಅಧಿಕಾರಿ ಲಕ್ಷ್ಮಣ ನಂದಿ ಎನ್ನುವವರು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ದಾಖಲಿಸಿದ್ದರು. ಶಿಗ್ಗಾವಿ ಮೈದಾನದಲ್ಲಿ 2023ರ ಮೇ 1 ರಂದು ನಡ್ಡಾ ಅವರು ಅಂದಿನ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಭಾಷಣ ಮಾಡಿದ್ದರು. ಈ ಭಾಷಣದಲ್ಲಿ ನಡ್ಡಾ ಅವರು ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ದೂರು ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ತಡೆ ನೀಡುವಂತೆ ನಡ್ಡಾ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
![](https://bcsuddi.com/wp-content/uploads/2025/02/WhatsApp-Image-2025-02-06-at-9.18.58-AM.jpeg)