ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿ, ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿದರು.
ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು ಎಂದು ಸೂಚಿಸಿದರು.


































