ಬೆಂಗಳೂರು: ಮುಡಾ ಹಗರಣದಲ್ಲಿ ಕೊಂಚ ರಿಲೀಫ್ ಪಡೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಡರಾತ್ರಿವರೆಗೆ ಕುಳಿತು ವರ್ಗಾವಣೆ ಸೇರಿದಂತೆ ಪ್ರಮುಖ ಕಡತಗಳಿಗೆ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಇಡೀ ದಿನ ಗಾಂಧಿ ಜಯಂತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಇಂದು (ಗುರುವಾರ) ದಸರಾ ಕಾರ್ಯಕ್ರಮದ ನಿಮಿತ್ತ ಮೈಸೂರಿನಲ್ಲಿ ಇರಲಿದ್ದಾರೆ. ಶುಕ್ರವಾರ ಹಾಗೂ ಶನಿವಾರ ರಾಯಚೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಮಂಗಳವಾರ ರಾತ್ರಿಯೇ ಹಲವು ಮಹತ್ವದ ಕಡತಗಳಿಗೆ ಸಹಿ ಮಾಡಿದ್ದಾರೆ ಎಂಬ ಮಾಹಿತಿ ಸಿಎಂ ಆಪ್ತಮೂಲಗಳಿಂದ ಲಭ್ಯವಾಗಿದೆ. ಮಂಗಳವಾರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಲ್ಲದ ಮನಸ್ಸಿನಿಂದಲೇ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು, ಸಂಜೆ ವಿಧಾನಸೌಧದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಕುರಿತ ಸಭೆಯಲ್ಲೂ ಹೆಚ್ಚು ಆಸಕ್ತಿ ವಹಿಸಿರಲಿಲ್ಲ. ವಿಧಾನಸೌಧದಿಂದ ತಮ್ಮ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ರಾತ್ರಿವರೆಗೆ ಮುಡಾ ಪ್ರಕರಣದ ಆಗು-ಹೋಗುಗಳ ಕುರಿತು ಅಧಿಕಾರಿಗಳು ಹಾಗೂ ಆಪ್ತರೊಂದಿಗೆ ಚರ್ಚಿಸಿದ್ದಾರೆ.
