ಬೆಂಗಳೂರು: ರಾಜ್ಯದಲ್ಲಿ 13.87 ಲಕ್ಷ ಅನರ್ಹ BPL ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 3.63 ಲಕ್ಷ BPL ಕಾರ್ಡುಗಳನ್ನು ರದ್ದು ಪಡಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ವಿಕಾಸಸೌಧಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಬಳಿಕ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ ಅವರು, ಇನ್ನೂ 3.97 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ರದ್ದಾಗಬೇಕಿದೆ. ಸುಮಾರು 4,036 ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿದ್ದು, ಈ ಪೈಕಿ 2,964 ರದ್ದು ಮಾಡಲಾಗಿದೆ. ಅವರಿಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದರು. 6 ತಿಂಗಳುಗಳಿಂದ ಪಡಿತರ ಪಡೆಯದಿರುವುದು, ಒಂದು ವರ್ಷದಿಂದ DBT ಸ್ವೀಕೃತವಾಗದೆ ಇರುವುದು, ಆದಾಯ ತೆರಿಗೆ ಪಾವತಿ ಮಾಡುತ್ತಿರುವ ವಾರ್ಷಿಕ ವರಮಾನ ಹೆಚ್ಚಿರುವುದು ಮತ್ತಿತರ ಕಾರಣಗಳಿಂದ ಸುಮಾರು 20 ಲಕ್ಷಕ್ಕೂ ಹೆಚ್ಚು ಅನರ್ಹ ಕಾರ್ಡ್‌ಗಳು ಇರಬಹುದೆಂದು ಅಂದಾಜಿಸಲಾಗಿದೆ. ಇವುಗಳನ್ನು ಪರಿಶೀಲಿಸಿದರೆ ಕನಿಷ್ಠ 10 ರಿಂದ 12 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆಯಾಗಬಹುದು. ಈ ರೀತಿ ಪತ್ತೆಯಾದ ಅನರ್ಹ ಕಾರ್ಡ್‌ಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಕಾರ್ಡ್‌ಗಳನ್ನು ನೀಡಲು ಮುಂದಿನ ದಿನಗಳಲ್ಲಿ ಹೊಸ ಅರ್ಜಿ ಆಹ್ವಾನಿಸಲಾಗುವುದು ಎಂದರು.