ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ, ಉತ್ತರ ಒಳನಾಡಿನ ಒಂದೆರಡು ಕಡೆ ಶುಕ್ರವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ.ಇರಲಿದೆ.
ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆ ಮತ್ತು ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ತಲುಪಲಿದೆ ಎಂದು ಇಲಾಖೆ ತಿಳಿಸಿದೆ. ಮುಂದಿನ ಐದು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.