ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೊಸದಾಗಿ ಪಾಸ್‌ಪೋರ್ಟ್ ಪಡೆಯುವ ಸಂಬಂಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಲ್ಲಿನ ನ್ಯಾಯಾಲಯ ಮೇ 26ಕ್ಕೆ ಮುಂದೂಡಿದೆ.
ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇದರ ಬೆನ್ನಲ್ಲೇ ಅವರು ರಾಜತಾಂತ್ರಿಕ ಪ್ರಯಾಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಹೀಗಾಗಿ ಅವರು ‘ಸಾಮಾನ್ಯ ಪಾಸ್‌ಪೋರ್ಟ್’ ಪಡೆದುಕೊಳ್ಳಲು ‘ನಿರಾಕ್ಷೇಪಣಾ ಪತ್ರ’ ನೀಡುವಂತೆ ಕೋರಿ ಮಂಗಳವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ರಾ ಅವರು ಈ ಅರ್ಜಿಯ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದ್ದಾರೆ. ನ್ಯಾಯಾಲಯವು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಹಾಗೂ ಇತರರಿಗೆ 2015ರ ಡಿಸೆಂಬರ್ 19ರಂದು ಜಾಮೀನು ನೀಡಿತ್ತು.