ನವದೆಹಲಿ: ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಐದನೇ ವರ್ಷದ ಪುಣ್ಯತಿಥಿಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಇವರೊಂದಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್, ಗೃಹ ಸಚಿವ ಅಮಿತ್ ಶಾ, ರಾಜನಾಥ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಎನ್ಡಿಎ ಮೈತ್ರಿಕೂಟದ ಹಲವು ಗಣ್ಯರು ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಗೌರವ ಸಲ್ಲಿಸಿದರು. ವಾಜಪೇಯಿ ಅವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದ ಪಿಎಂ ಮೋದಿ, ಭಾರತದ ಪ್ರಗತಿಯನ್ನು ಹೆಚ್ಚಿಸುವಲ್ಲಿ ಮತ್ತು ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ 21 ನೇ ಶತಮಾನಕ್ಕೆ ಕೊಂಡೊಯ್ಯುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.