Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಜಾಗರೂಕತೆಯಿಂದ ಬಳಸಿ- ನ್ಯಾ. ಎಂ. ವಿಜಯ್

0

ಚಿತ್ರದುರ್ಗ : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಅತ್ಯಂತ ಜಾಗರೂಕತೆಯಿಂದ ಬಳಸಬೇಕು, ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯಕ್ಕೆ ಸಿಲುಕಬೇಕಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಅವರು ಹೇಳಿದರು.

     ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಚಿತ್ರದುರ್ಗ ವಕೀಲರ ಸಂಘ ಮತ್ತು ಸರ್ಕಾರಿ ವಿಜ್ಞಾನ ಕಾಲೇಜು ಇವರ ಸಹಯೋಗದೊಂದಿಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

      ವಿದ್ಯಾರ್ಥಿಗಳು ತಂತ್ರಜ್ಞಾನದ ಬಳಕೆಯನ್ನು ಎಚ್ಚರಿಕೆಯಿಂದ ಮಾಡಬೇಕು, ಅದರಲ್ಲೂ ಪ್ರಮುಖವಾಗಿ ಸಾಮಾಜಿಕ ಜಾಲತಾಣಗಳನ್ನು ಅತ್ಯಂತ ಜಾಗರೂಕತೆಯಾಗಿ ಬಳಸಬೇಕು, ಸ್ಪಲ್ಪ ಎಚ್ಚರ ತಪ್ಪಿದರೂ ಅಂತಹವರು ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗಾಗುತ್ತದೆ.  ಜಾಗ್ರತೆ ವಹಿಸದಿದ್ದಲ್ಲಿ ಕಾನೂನು ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದ ಅವರು,  ಸೈಬರ್ ಅಪರಾಧಗಳು ಯಾವ ರೀತಿಯಲ್ಲಿ ಅಪಾಯಗಳನ್ನು ತಂದೊಡ್ಡುತ್ತವೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

     ಸೈಬರ್ ಅಪರಾಧಗಳು ಹಾಗೂ ಕಾನೂನು ವಿಷಯದ ಕುರಿತು ಉಪನ್ಯಾಸ ನೀಡಿದ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮಂಜುನಾಥ್ ಅವರು, ಸೈಬರ್ ಅಪರಾಧಗಳ ವಿಧಗಳು, ಅಪಾಯ ತರುವಂತಹ ವೆಬ್‍ಸೈಟ್‍ಗಳು, ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣಗಳ ಸುರಕ್ಷತಾ ಬಳಕೆ ಕುರಿತು ಮಾಹಿತಿ ನೀಡಿದರು.  ಇತ್ತೀಚೆಗೆ ಪೊಲೀಸ್ ಇಲಾಖೆಯಲ್ಲಿ ದಾಖಲಾದ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳು ಅತ್ಯಂತ ಎಚ್ಚರಿಕೆಯಿಂದ ಮೊಬೈಲ್ ಬಳಸಬೇಕು, ಆನ್‍ಲೈನ್ ಜಾಬ್‍ಗಳು, ಬಹುಮಾನ ಯೋಜನೆಗಳ ಬಗ್ಗೆ ಆಮಿಷಕ್ಕೆ ಒಳಗಾಗಿ ಮೋಸಹೋಗಬಾರದು ಎಂದು ಸಲಹೆ ನೀಡಿದರು.

     ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ. ಅನಿಲ್ ಕುಮಾರ್ ಅವರು ಮಾತನಾಡಿ, ನಾಗರಿಕರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.  ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಗಂಗಾಧರ್ ಅವರು ಸೈಬರ್ ಅಪರಾಧಕ್ಕೆ ಸಂಬಂಧಿಸಿದಂತೆ ತಮಗಾದ ಅನುಭವಗಳನ್ನು ಇದೇ ಸಂದರ್ಭದಲ್ಲಿ ಹಂಚಿಕೊಂಡರು.

    ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೊ. ಸಿದ್ರಾಮಪ್ಪ ಚನಗೊಂಡ, ಡಾ. ರಮೇಶ್ ಅಯ್ಯನಹಳ್ಳಿ, ಪ್ರೊ. ವಿದ್ಯಾ ಕೆ.ಬಿ., ಡಾ. ಮಹೇಶ್ ನಾಯಕ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

Leave A Reply

Your email address will not be published.