ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಇಂದು ವಿಸ್ತರಿಸಿದೆ.
ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದಿದ್ದು, ಈ ಹಿನ್ನೆಲೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಕೋರ್ಟ್ ಗೆ ಹಾಜರಾಗಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದ್ದಾರೆ.
ಈ ಹಿಂದೆ ಸಿಸೋಡಿಯಾ ಅವರು ಮಧ್ಯಂತರ ಜಾಮೀನು ಕೋರಿ ಅರಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ಇಂದು ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರನ್ನು ಸಹ ಬಂಧಿಸಲಾಗಿತ್ತು. ಆದರೆ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.