ಲಖನೌ: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಭದ್ರತೆ ದೃಷ್ಟಿಯಿಂದ ಡ್ರೋನ್‌ಗಳು ಮತ್ತು 10,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಈ ಪ್ರದೇಶದಲ್ಲಿ ಯಾವುದೇ ಅಪರಿಚಿತ ಡ್ರೋನ್ ಹಾರಾಟ ಕಂಡುಬಂದರೂ ಅದರ ಮೇಲೆ ನಿಯಂತ್ರಣ ಸಾಧಿಸಲು ಡ್ರೋನ್ ನಿಗ್ರಹ ವ್ಯವಸ್ಥೆಯನ್ನು ಸಹ ಅಳವಡಿಸಲಾಗಿದೆ ಎಂದು ಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಇನ್ನು ಅಯೋಧ್ಯೆ ಜಿಲ್ಲೆಯಾದ್ಯಂತ 10,000 ಸಿಸಿಟಿವಿ ಅಳವಡಿಸಲಾಗುತ್ತಿದ್ದು, ಇದರ ಜೊತೆಗೆ ಆಧುನಿಕ ತಂತ್ರಜ್ಞಾನ ಉಪಕರಣಗಳನ್ನು ಕೂಡ ಪೊಲೀಸರಿಗೆ ನೆರವಾಗುವ ದೃಷ್ಟಿಯಿಂದ ಅಳವಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.