ಅರ್ಥಪೂರ್ಣ ಪ್ರಜಾಪ್ರಭುತ್ವ ದಿನ ಆಚರಣೆ: ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್

 

ಚಿತ್ರದುರ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ರಚಿಸುವ ಮೂಲಕ ರಾಜ್ಯ ಸರ್ಕಾರದಿಂದ ವಿನೂತನ ಪ್ರಯತ್ನ ಮಾಡಲಾಗಿದ್ದು, ಅರ್ಥಪೂರ್ಣವಾಗಿ ಪ್ರಜಾಪ್ರಭುತ್ವ ದಿನ ಆಚರಿಸಲಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ಹಿರಿಯೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ  ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಕರ್ನಾಟಕದ ಉತ್ತರ ತುದಿಯಿಂದ ದಕ್ಷಿಣದ ತುದಿಯವರೆಗೆ ಅಂದರೆ ಬೀದರ್‍ನಿಂದ ಚಾಮರಾಜನಗರ ಜಿಲ್ಲೆಯವರೆಗೂ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಅರಿವು ಮೂಡಿಸುವ ನಿಟ್ಟಿನಲ್ಲಿ ಏರ್ಪಡಿಸಿರುವ ಈ ಕಾರ್ಯಕ್ರಮ ಶ್ಲಾಘನೀಯವಾಗಿದೆ. ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಮೇಲಿನ ಕಣಿವೆ ಗ್ರಾಮದಿಂದ ಜಿಲ್ಲೆಯ ಗಡಿ ಭಾಗವಾಗಿರುವ ಜವನಗೊಂಡನಹಳ್ಳಿಯವರೆಗೂ 145 ಕಿ.ಮೀ. ಉದ್ದವರೆಗೂ ಮಾನವಸರಪಳಿ ನಿರ್ಮಿಸಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಕೈ ಜೋಡಿಸಿದ ಶಿಕ್ಷಣ ಇಲಾಖೆ, ಖಾಸಗಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ಎನ್.ಜಿ.ಓಗಳು, ಮಹಿಳಾ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಲಿತ ಸಂಘಟನೆಗಳು ಕೈಜೋಡಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿರುವುದಕ್ಕಾಗಿ ಸಚಿವರು ಧನ್ಯವಾದ ತಿಳಿಸಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ರಾಜ್ಯದಲ್ಲಿ 25 ಲಕ್ಷ ಜನರಿಂದ 2500 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಾಣ ಮಾಡಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ 500 ಹೆಚ್ಚು ಬಸ್‍ಗಳಲ್ಲಿ 35 ಸಾವಿರ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಾಣದಲ್ಲಿ ಭಾಗವಹಿಸಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಸಾರಲಾಗಿದೆ. ಮಾನವ ಸರಪಳಿ ಹಾದು ಹೊಗಿರುವ ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಏಕ ಕಾಲಕ್ಕೆ ಕಾರ್ಯಕ್ರಮ ಆಯೋಜಿಸುವ ಮೂಲಕ ಮಾನವ ಸರಪಳಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೇರಿದಂತೆ ಎಲ್ಲ ಗಣ್ಯರು, ಅಧಿಕಾರಿಗಳು ಅಂಬೇಡ್ಕರ್ ವೃತ್ತದಲ್ಲಿನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಹಿರಿಯೂರು ನಗರಸಭೆ ಅಧ್ಯಕ್ಷ ಅಜಯ್ ಕುಮಾರ ಸೇರಿದಂತೆ, ಉಪಾಧ್ಯಕ್ಷರು, ಸದಸ್ಯರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement