ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ‘ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ’ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಸರ್ಕಾರದಿಂದ ಎಲ್ಲ ಮಾದರಿಯ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಹಲವು ಬಾರಿ ಒತ್ತಾಯಿಸಿತ್ತು. ಸಾರಿಗೆ ಸಂಘಟನೆಗಳ ಮನವಿ ಬೆನ್ನಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳು ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಮುಂದಾಗಿದೆ. ಹೀಗಾಗಿ, ರಾಜ್ಯಾದ್ಯಂತ ಇಂದು ಜುಲೈ 5ರಿಂದ ಕಡ್ಡಾಯವಾಗಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡುಬಂದಲ್ಲಿ ಕೂಡಲೇ ಅವುಗಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಸಾರಿಗೆ ಅಧಿಕಾರಿಗಳು ನಗರದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಮುಂದಾಗಿದ್ದು, 11 ತಂಡವನ್ನು ರಚಿಸಿ ಆರ್‌ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಸೀಜ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
