ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಇಂದು ಮುಕ್ತಾಯವಾಗಲಿದೆ. ಈ ಹಿನ್ನೆಲೆ ಆರೋಪಿಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಈಗಾಗಲೇ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಎರಡೆರಡು ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಬಲ ಸಾಕ್ಷಿಗಳ ಸಂಗ್ರಹಕ್ಕೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದು, ಇದುವರೆಗೆ ಪ್ರಜ್ವಲ್ ವಿರುದ್ಧದ 2 ಪ್ರಕರಣಗಳ ತನಿಖೆಯನ್ನು ಅಧಿಕಾರಿಗಳು ಸಂಪೂರ್ಣ ಮಾಡಿದ್ದಾರೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸಿಐಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಎಲ್ಲಾ ಪ್ರಕರಣಗಳ ತನಿಖೆ ಬಹುತೇಕ ಪೂರ್ಣಗೊಂಡಿದೆ. ಇದೀಗ ಎಸ್‌ಐಟಿ ತನಿಖೆ ಅಂತ್ಯವಾದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ.
ಇನ್ನು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಮೇಲಿನ ಕಾಯ್ದಿರಿಸಿದ ಆದೇಶವನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ.