ನವದೆಹಲಿ: ಇಡೀ ಆಮ್ ಆದ್ಮಿ ಪಕ್ಷವೇ ಸ್ವಾತಿ ಅವರ ಇಮೇಜ್ ಅನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಕಿಡಿಕಾರಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ತಮ್ಮದೇ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಎಎಪಿ ನಾಯಕರು ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದು ವಿಷಾದನೀಯ ಸಂಗತಿ. ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ಈ ವಿಷಯದ ಬಗ್ಗೆ ಮಾತನಾಡುವ ಸಮಯ ಬಂದಿದೆ ಎಂದು ಅವರು ತಿಳಿಸಿದ್ದಾರೆ.
ಹಲ್ಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕೇಜ್ರಿವಾಲ್ ನಿವಾಸದ ಸಿಸಿಟಿವಿ ದೃಶ್ಯಗಳನ್ನು ಎಎಪಿ ಶುಕ್ರವಾರ ಬಿಡುಗಡೆ ಮಾಡಿತ್ತು. ಸ್ವಾತಿ ಮಾಲಿವಾಲ್ ಮೇಲೆ ಭ್ರಷ್ಟಾಚಾರದ ಆರೋಪವಿದ್ದು, ಕೇಜ್ರಿವಾಲ್ ವಿರುದ್ಧ ಸಂಚು ರೂಪಿಸಲು ಬಿಜೆಪಿ ಅವರಿಗೆ ಬೆದರಿಕೆ ಹಾಕಿದೆ ಎಂದು ಆರೋಪ ಮಾಡಿತ್ತು. ಇದೀಗ ಇದರ ಬೆನ್ನಲ್ಲೇ ಬಿಜೆಪಿಗರು ಎಎಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.