ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ಅಲ್ಲಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ. ರಾಜ್ಯದಲ್ಲಿಯೇ ಕೊಪ್ಪಳ ಜಿಲ್ಲೆಯಲ್ಲಿ ಮಂಗಳವಾರ ಗರಿಷ್ಠ ಉಷ್ಣಾಂಶ 38.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.