ಉಡುಪಿ : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅಂದಾಜು 8.69 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಹೌದು. ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ ಶ್ರೀನಿವಾಸ್ ಟಿ. ಎಂ. ಅವರ ಮನೆ ಸೇರಿ 15 ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಅಧಿಕಾರಿಗಳು ಬೃಹತ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ನಡೆದ ಈ ದಾಳಿಯಲ್ಲಿ ಬರೋಬ್ಬರಿ 8.69 ಕೋಟಿ ರೂ. ಮೌಲ್ಯದ ಅಕ್ರಮ ಸಂಪತ್ತು ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ. 31 ಎಕರೆ ಕೃಷಿ ಜಮೀನು ಸೇರಿದಂತೆ ಹಲವು ಸ್ಥಿರಾಸ್ತಿಗಳ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪತ್ತೆಯಾದ ಪ್ರಮುಖ ಆಸ್ತಿಗಳು:
ಸ್ಥಿರಾಸ್ತಿ (ಸುಮಾರು 6.90 ಕೋಟಿ ರೂ.): 11 ನಿವೇಶನಗಳು, 6 ಸುಸಜ್ಜಿತ ವಾಸದ ಮನೆಗಳು ಮತ್ತು 31 ಎಕರೆ ಕೃಷಿ ಭೂಮಿ.
ಚರಾಸ್ತಿ (ಸುಮಾರು 2.66 ಕೋಟಿ ರೂ.): 1.47 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳು, 17 ಲಕ್ಷ ರೂ. ಮೌಲ್ಯದ ಕಾರುಗಳು, 25.75 ಲಕ್ಷ ರೂ. ನಗದು ಠೇವಣಿ ಮತ್ತು 72.68 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು.
ಮಂಗಳೂರು ಲೋಕಾಯುಕ್ತ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಸಾಧ್ಯತೆ ದಟ್ಟವಾಗಿದೆ.






























