ಪಟ್ನಾ: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಎಐಎಂಐಎಂ ರಾಜ್ಯ ಕಾರ್ಯದರ್ಶಿ ಅಬ್ದುಲ್ ಸಲಾಂ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೋಪಾಲಗಂಜ್ ಉಪಚುನಾವಣೆಯಲ್ಲಿ ಅಬ್ದುಲ್ ಸಲಾಂ ಎಐಎಂಐಎಂ ಅಭ್ಯರ್ಥಿಯಾಗಿದ್ದರು. ಹತ್ಯೆಗೆ ಸಂಬಂಧಿಸಿದಂತೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿಯು ಬಿಹಾರ ಸರ್ಕಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಮಾಹಿತಿ ನೀಡಿರುವ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಾಂಜಲ್ ಕುಮಾರ್, ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಅಬ್ದುಲ್ ಸಲಾಂ ಅವರ ಮೇಲೆ ಗುಂಡು ಹಾರಿಸಿದ್ದಾರೆ.
ಆರೋಪಿಗಳನ್ನು ಬಂಧಿಸಲು ಎಸ್‌ಐಟಿ ರಚಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ‘ಗೋಪಾಲ್‌ಗಂಜ್‌ನಲ್ಲಿ ಎಐಎಂಐಎಂ ರಾಜ್ಯ ಕಾರ್ಯದರ್ಶಿ ಅಬ್ದುಲ್ ಸಲಾಂ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅವರ ಕುಟುಂಬಸ್ಥರಿಗೆ ದುಃಖ ಭರಿಸಲು ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಿವಾನ್ ಜಿಲ್ಲಾಧ್ಯಕ್ಷ ಆರಿಫ್ ಜಮಾಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಮ್ಮ ಪಕ್ಷದ ನಾಯಕರೇ ಏಕೆ ಗುರಿಯಾಗುತ್ತಿದ್ದಾರೆ? ಅವರ ಕುಟುಂಬಗಳಿಗೆ ನ್ಯಾಯ ಸಿಗುವುದೇ? ಈ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಉತ್ತರಿಸಲಿ’ ಎಂದು ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.