ಎಚ್‌ಡಿಕೆ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಕೆಶಿ ತಿರುಗೇಟು

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂಬ ಎಚ್‌.ಡಿ. ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಡಿ.ಕೆ ಶಿವಕುಮಾರ್‌ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಉತ್ತರ ನೀಡಿದ ಶಿವಕುಮಾರ್ ಅವರು, ‘ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು. ಇನ್ನು ಸಿಡಿ ಫ್ಯಾಕ್ಟರಿ ನಂತರ ಈಗ ಮೂಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಮಾತನಾಡಿ, ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ತಿರುಗೇಟು ನೀಡಿದರು. ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ ಸೂಚನೆ ನೀಡಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾತನಾಡಿ, ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ನನಗೆ ಈ ಆರೋಪದ ವಿಚಾರ ಗೊತ್ತೇ ಇಲ್ಲ. ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವೂ ಇಲ್ಲ ಎಂದು ಹೇಳಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement