ಥಿಂಪು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಸಂಪೂರ್ಣ ಬಹುಮತ ಪಡೆದಿರುವುದಕ್ಕೆ ಭೂತಾನ್ ಪ್ರಧಾನಿ ಶೆರಿಂಗ್ ತೊಬ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ವಿಶ್ವದ ಅತಿದೊಡ್ಡ ಚುನಾವಣೆಯಲ್ಲಿ ಸತತ 3ನೇ ಬಾರಿಗೆ ಗೆದ್ದು ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎಗೆ ಅಭಿನಂದನೆಗಳು. ಅವರು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದ್ದಂತೆ, ನಮ್ಮ ಎರಡು ದೇಶಗಳ ನಡುವಿನ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲು ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಬಯಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ.
ಅಷ್ಟೇ ಅಲ್ಲದೇ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು, ಎಕ್ಸ್ನಲ್ಲಿ ಪೋಸ್ಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ‘ಚುನಾವಣಾ ಗೆಲುವು ಮತ್ತು ಉತ್ತಮ ಕೆಲಸಕ್ಕಾಗಿ ಶುಭಾಶಯಗಳು. ಇಟಲಿ ಮತ್ತು ಭಾರತವನ್ನು ಒಂದುಗೂಡಿಸುವ ಸ್ನೇಹವನ್ನು ಬಲಪಡಿಸಲು ಮತ್ತು ನಮ್ಮ ರಾಷ್ಟ್ರಗಳು ಮತ್ತು ನಮ್ಮ ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ.
ಇನ್ನು ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಕೂಡ ಪ್ರಧಾನಿ ಮೋದಿ ಅವರಿಗೆ ಅಭಿನಂದಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ತಮ್ಮ ದೇಶವು ನೆರೆಯ ರಾಷ್ಟ್ರವಾಗಿ, ಭಾರತದೊಂದಿಗೆ ಬಾಂಧವ್ಯವನ್ನು ಬಲಪಡಿಸಲು ಎದುರು ನೋಡುತ್ತಿದೆ. ನಾನು ಬಿಜೆಪಿ ನೇತೃತ್ವದ ಎನ್‌ಡಿಎಗೆ ನನ್ನ ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಪ್ರಗತಿ ಮತ್ತಷ್ಟು ಹೆಚ್ಚಲಿದೆ. ನೆರೆಯ ಶ್ರೀಲಂಕಾ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಎದುರು ನೋಡುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಹೀಗೆ ಎನ್‌ಡಿಎ ಮೈತ್ರಿ ಕೂಟಕ್ಕೆ ಸ್ಪಷ್ಟ ಬಹುಮತ ದೊರೆತ ಹಿನ್ನೆಲೆ ವಿದೇಶಿ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು ವಿದೇಶಿ ನಾಯಕರ ಅಭಿನಂದನೆಗೆ ಪ್ರಧಾನಿ ಮೋದಿ ಅವರು ರೀಟ್ವೀಟ್ ಮಾಡಿ ಧನ್ಯವಾದಗಳನ್ನು ತಿಳಿಸಿದ್ದಾರೆ.