ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪವರ್ಗೀಕರಣ, ಈ ವರ್ಗಗಳಲ್ಲಿ ಹೆಚ್ಚು ಅಂಚಿನಲ್ಲಿರುವ ಗುಂಪುಗಳಿಗೆ ಉದ್ಯೋಗ ಮತ್ತು ಶಿಕ್ಷಣ ಕೋಟಾವನ್ನು ಒದಗಿಸಲು ಅನುಮತಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಮೂರು ದಿನಗಳ ವಿಚಾರಣೆಯ ನಂತರ ಈ ವರ್ಷ ಫೆಬ್ರವರಿ 8ರಂದು ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು 6:1 ಬಹುಮತದೊಂದಿಗೆ ಅನುಮತಿ ನೀಡಿದೆ. ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಸ್‌ಸಿ-ಎಸ್‌ಟಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿಯಿದೆ ಎಂದು ಪೀಠ ಹೇಳಿದೆ. ನ್ಯಾಯಮೂರ್ತಿ ಬೇಲಾ ತ್ರಿವೇದಿ ಅನುಮತಿಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಏನಿದು ಪ್ರಕರಣ?: ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ-2006 ರ ಸೆಕ್ಷನ್ 4 (5) ನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್‌ನ ಈ 2010ರ ತೀರ್ಪನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸಲ್ಲಿಸಿದ ಅರ್ಜಿ ಸೇರಿದಂತೆ ಒಟ್ಟು 23 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.