ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶನಗಳನ್ನು ಪಾಲಿಸುವುದರೊಂದಿಗೆ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಿಇಟಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚುನಾವಣೆ ಕಾರ್ಯಗಳಿಗೆ ನಿಯೋಜನೆಗೊಂಡ ಅಧಿಕಾರಿಗಳನ್ನು ಹೊರತುಪಡಿಸಿ, ಬೇರೆ ಅಧಿಕಾರಿಗಳನ್ನು ಪರೀಕ್ಷಾ ಕಾರ್ಯಗಳಿಗೆ ನೇಮಿಸಬೇಕು. ಬಿಸಿಲು ತೀವ್ರತರನಾಗಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಚಿತ್ರದುರ್ಗ ನಗರದ 14 ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ. 6456 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಪರೀಕ್ಷಾ ಅವ್ಯವಹಾರಗಳನ್ನು ತಡೆಯುವ ದೃಷ್ಟಿಯಿಂದ ಪ್ರತಿ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಪರೀಕ್ಷೆ ಬರೆಯಲು ಆಗಮಿಸುವ ವಿದ್ಯಾರ್ಥಿಗಳಿಗೆ ಸಾಮಾನ್ಯ ವಸ್ತ್ರ ಸಂಹಿತೆ ಅನ್ವಯಿಸುತ್ತದೆ. ಪರಿಕ್ಷಾ ಕೇಂದ್ರದೊಳಗೆ ಮೊಬೈಲ್ ಬಳಸಲು ಅವಕಾಶವಿಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ, ನೊಂದಣಿ ಸಂಖ್ಯೆ, ಕೊಠಡಿ ವಿವರಗಳನ್ನು ಒಳಗೊಂಡ ಸೂಚನಾ ಫಲಕಗಳನ್ನು ಮೂರ್ನಾಲ್ಕು ಕಡೆ ಹಾಕಬೇಕು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ಶೀಟ್‍ಗಳನ್ನು ಕೊಂಡೊಯ್ಯುವ ಮಾರ್ಗಾಧಿಕಾರಿಗಳ ವಿವರಗಳನ್ನು ಆಯಾ ಕೇಂದ್ರಗಳ ಮುಖ್ಯಸ್ಥರಿಗೆ ಮೊದಲೇ ನೀಡಿರಬೇಕು. ನಿಗದಿ ಪಡಿಸಿದ ವೇಳೆ ಸರಿಯಾಗಿ ಖಜಾನಾಧಿಕಾರಿಗಳ ಸಮ್ಮುಖದಲ್ಲಿಯೇ ಸ್ಟ್ರಾಂಗ್ ರೂಮ್‍ಗಳಿಂದ ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ಬಂಡಲ್‍ಗಳನ್ನು ಮಾರ್ಗಾಧಿಕಾರಿಗಳಿಗೆ ನೀಡಬೇಕು. ಇವುಗಳನ್ನು ಪೆÇಲೀಸ್ ಭದ್ರತೆಯಲ್ಲಿಯೇ ಸರಬರಾಜು ಮಾಡಬೇಕು. ಪ್ರತಿ ಪರೀಕ್ಷಾ ಕೇಂದ್ರದ ಸುತ್ತ ಇಬ್ಬರು ಪೆÇಲೀಸರನ್ನು ಭದ್ರತೆಗಾಗಿ ನಿಯೋಜಿಸಬೇಕು. ಪರೀಕ್ಷೆ ಪ್ರಾಧಿಕಾರದ ನಿಯಮಗಳನ್ನು ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ ಮಾತನಾಡಿ, ಚಿತ್ರದುರ್ಗ ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಈ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್‍ಗಳನ್ನು ಸರಬರಾಜು ಮಾಡಲು ಹಾಗೂ ಮರಳಿ ಪಡೆಯಲು 5 ಮಾರ್ಗಾಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ಸಹ ನೇಮಿಸಲಾಗಿದೆ. ವಿಜ್ಞಾನ ವಿಷಯ ಶಿಕ್ಷಕರನ್ನು ಹೊರತುಪಡಿಸಿ ಬೇರೆ ವಿಷಯಗಳ ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕರಾಗಿ ನೇಮಿಸಲಾಗಿದೆ. ಏಪ್ರಿಲ್ 18 ರಂದು ಬೆಳಿಗ್ಗೆ 10:30 ರಿಂದ 11:50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50 ವರೆಗೆ ಗಣಿತಶಾಸ್ತ್ರ, ಏಪ್ರಿಲ್ 19 ರಂದು ಬೆಳಿಗ್ಗೆ 10:30 ರಿಂದ 11:50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50 ವರೆಗೆ ರಸಾಯನಶಾಸ್ತ್ರ ವಿಷಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆಯನ್ನು ಹೊರಡಿಸಲು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿರುವುದಾಗಿ ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.