‘ಒಂದು ದೇಶ ಒಂದು ಚುನಾವಣೆ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು’- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ‘‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು’’. ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ ಅವರು, ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ, ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆಪಡುತ್ತಿದ್ದಾರೆ. ದೇಶಾದ್ಯಂತ ಕಾನೂನು ಸುವ್ಯವಸ್ಥೆ ಮೇಲಿನ ನಿಯಂತ್ರಣ ತಪ್ಪಿಹೋಗಿದ್ದು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಮಿತಿಮೀರಿ ಹೋಗುತ್ತಿದೆ. ಈ ಬಗ್ಗೆ ಯೋಚನೆ ಮಾಡಲು ಕೂಡಾ ಪುರುಸೊತ್ತಿಲ್ಲದ ಪ್ರಧಾನ ಮಂತ್ರಿಗಳು ‘‘ಒಂದು ದೇಶ ಒಂದು ಚುನಾವಣೆ’’ ಎಂಬ ಗಿಮಿಕ್ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ ಎಂದರು.

ಆಡಳಿತಾರೂಢ ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ “ಒಂದು ದೇಶ ಒಂದು ಚುನಾವಣೆ” ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘‘ಒಂದು ದೇಶ ಒಂದು ಚುನಾವಣೆ’’ ವ್ಯವಸ್ಥೆಗೆ ವಿರುದ್ಧವಾಗಿದೆ.ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಅಕ್ಷೇಪ ವ್ಯಕ್ತಪಡಿಸಿದರು.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement