ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಇಂದು (ಗುರುವಾರ) ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.
ರಾಷ್ಟ್ರಪತಿಗಳಿಗೆ 18,000 ಕ್ಕೂ ಅಧಿಕ ಪುಟಗಳ ವರದಿಯನ್ನು ಸಮಿತಿಯು ಸಲ್ಲಿಸಿದೆ. ವರದಿ ಸಲ್ಲಿಕೆಗೆ ಸುಮಾರು 191 ದಿನಗಳ ಕಾಲವಕಾಶವನ್ನು ಸಮಿತಿ ತೆಗೆದುಕೊಂಡಿತ್ತು. ವಿವಿಧ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆ ಪಡೆದು ಮಾಹಿತಿ ಸಂಗ್ರಹಿಸಲಾಗಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣಾ ಮತದಾನ ನಡೆಸುವುದಾಗಿದೆ. ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಇದಾಗಿದೆ.
ಭಾರತದಲ್ಲಿ ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳು ಹಾಲಿ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಕೆಲವು ಕಾರಣಗಳಿಂದ ವಿಸರ್ಜನೆಯಾದಾಗ ಪ್ರತ್ಯೇಕವಾಗಿ ಚುನಾವಣೆ ನಡೆಯುತ್ತಿದೆ.
ಕೋವಿಂದ್ ನೇತೃತ್ವದ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಹಿರಿಯ ವಕೀಲ ಹರೀಶ್ ಸಾಳ್ವೆ ಇದ್ದರು