ಬೆಂಗಳೂರು : ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿರುವ ಕನ್ನಡ ಮಾಧ್ಯಮದ ಶಾಲೆಗಳಲ್ಲಿ ಮರಾಠಿ ಶಿಕ್ಷಕರನ್ನು ನೇಮಿಸಿರುವ ಕುರಿತು ರಾಷ್ಟ್ರಪತಿಯವರು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ. ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಕನ್ನಡಿಗರ ಸಂಸ್ಕೃತಿ, ಪರಂಪರೆಗೆ ಧಕ್ಕೆಯನ್ನುಂಟು ಮಾಡಲಾಗಿದೆ. ಸಾಂಗ್ಲಿ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿ 40 ಸಾವಿರಕ್ಕೂ ಅಧಿಕ ಮಕ್ಕಳು ಕನ್ನಡ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಾರೆ. 300ಕ್ಕೂ ಅಧಿಕ ಕನ್ನಡ ಶಾಲೆಗಳಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ಸರ್ಕಾರ ಕನ್ನಡ ಶಾಲೆಗಳಿಗೆ ಕನ್ನಡದ ಅಧ್ಯಾಪಕರನ್ನು ನೇಮಿಸಬೇಕಿತ್ತು. ಆದರೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಭಾಷಾ ಕಲಿಕೆಯ ದೃಷ್ಟಿಯಿಂದ ಇದೊಂದು ಅವೈಜ್ಞಾನಿಕ ವಿಧಾನ. ಇಂಡೋ ಆರ್ಯನ್ ಭಾಷಾ ಗುಂಪಿಗೆ ಸೇರಿದ ಮರಾಠಿಯ ಕಲಿಕೆ ಮತ್ತು ಕಲಿಸುವ ವಿಧಾನಗಳು ಬೇರೆ. ದ್ರಾವಿಡ ಭಾಷಾ ಗುಂಪಿಗೆ ಸೇರಿದ ಕನ್ನಡವನ್ನು ಕಲಿಸುವ ಮತ್ತು ಕಲಿಯುವ ವಿಧಾನಗಳು ಬೇರೆ. ಭಾಷಾ ಅಲ್ಪಸಂಖ್ಯಾತ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕದಿಂದಾಗಿ ಭವಿಷ್ಯದಲ್ಲಿ ಕನ್ನಡ ಮಾಧ್ಯಮದ ಶಾಲೆಗಳು ನಶಿಸಲಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಕನ್ನಡ ಮಾಧ್ಯಮದ ಶಿಕ್ಷಕರನ್ನು ನೇಮಿಸುವಂತೆ ಮಹಾರಾಷ್ಟ್ರ ಸರ್ಕಾರದೊಂದಿಗೆ ಚರ್ಚಿಸಬೇಕು. ರಾಷ್ಟ್ರಪತಿಗೂ ಪತ್ರ ಬರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಮನವಿ ಮಾಡಿದ್ದಾರೆ.