ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಬೆನ್ನಿಗೆ ನಿಲ್ಲುತ್ತದೆ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಡಿಸಿಎಂ

ಬೆಂಗಳೂರು: “ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಖಡಕ್ಕಾಗಿ ತಿಳಿಸಿದರು.

ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಂಪುಟ ಸಹೋದ್ಯೋಗಿಗಳ ಜತೆ ಶನಿವಾರ ಮಾಧ್ಯಮಗೋಷ್ಠಿ ನಡೆಸಿದರು.

“ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ನಮ್ಮ ಮುಖ್ಯಮಂತ್ರಿಗಳು ಈ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಅವರು ನಮ್ಮ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದು, ನಾವು ಒಟ್ಟಾಗಿ ರಾಜ್ಯದ ಜನರ ಸೇವೆ ಮುಂದುವರಿಸುತ್ತೇವೆ. ಕೇವಲ ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ಇಂಡಿಯಾ ಒಕ್ಕೂಟ ನಮ್ಮ ಮುಖ್ಯಮಂತ್ರಿಗಳ ಬೆನ್ನಿಗೆ ನಿಲ್ಲಲಿದೆ. ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಲಾಗಿದೆ. ಹೀಗಾಗಿ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮುಂದುವರಿಸುತ್ತೇವೆ. ಇದರ ಜತೆಗೆ ರಾಜಕೀಯವಾಗಿಯೂ ಜನರ ಮಧ್ಯೆ ಹೋರಾಟ ಮಾಡಲಾಗುವುದು” ಎಂದು ತಿಳಿಸಿದರು.

Advertisement

“ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿಯಾಗಿ ಪರಿವರ್ತನೆ ಮಾಡಿಕೊಳ್ಳಲು ನಡೆಯುತ್ತಿರುವ ಹುನ್ನಾರದ ವಿರುದ್ಧ ಹೋರಾಟ ಮಾಡುತ್ತೇವೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆ ಮಾಡಬೇಕಿದೆ. ಮುಖ್ಯಮಂತ್ರಿಗಳ ವಿರುದ್ಧ ಕಾನೂನು ಬಾಹಿರವಾಗಿ ವಿಚಾರಣೆಗೆ ಅನುಮತಿ ನೀಡಲಾಗಿದೆ. ನಾವು ಕಾನೂನು ಗೌರವಿಸುತ್ತೇವೆ. ದೇಶದ ಕಾನೂನು ನಮಗೆ ರಕ್ಷಣೆ ನೀಡಲಿದೆ ಎಂಬ ವಿಶ್ವಾಸವಿದೆ. ನ್ಯಾಯ ಪೀಠದಿಂದ ಅನ್ಯಾಯ ಆಗುವುದಿಲ್ಲ ಎಂಬ ನಂಬಿಕೆ ಇದೆ. ಹೀಗಾಗಿ ಕಾನೂನು ಸಮರಕ್ಕೆ ನಾವು ಸಜ್ಜಾಗಿದ್ದೇವೆ” ಎಂದು ತಿಳಿಸಿದರು.

“ಹಿಂದುಳಿದ ವರ್ಗದ ನಾಯಕ ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಬೆಳೆಯುತ್ತಿರುವುದನ್ನು ಸಹಿಸಲಾಗದೇ ಕೇಂದ್ರ ಬಿಜೆಪಿ ಸರ್ಕಾರ ದೊಡ್ಡ ಪಿತೂರಿ ನಡೆಸಿದೆ. ಇದನ್ನು ಧಿಕ್ಕರಿಸಿ ನಾವು ಹೋರಾಟ ಮಾಡುತ್ತೇವೆ. ರಾಜ್ಯಪಾಲರ ಕಚೇರಿ ಬಿಜೆಪಿ ಪಕ್ಷದ ಕೈಗೊಂಬೆಯಾಗಬಾರದು. ನಮ್ಮ ಸರ್ಕಾರ ಪ್ರತಿ ವರ್ಷ 56 ಸಾವಿರ ಕೋಟಿ ಹಣವನ್ನು ಬಡವರಿಗಾಗಿ ಹಂಚುತ್ತಿದೆ. ಇಂತಹ ಐತಿಹಾಸಿಕ ಯೋಜನೆಗಳನ್ನು ಜಾರಿಗೆ ತಂದಿರುವ ಸರ್ಕಾರದ ವಿರುದ್ಧ ಈ ಷಡ್ಯಂತ್ರ ನಡೆಸಲಾಗುತ್ತಿದೆ. ಈ ಸರ್ಕಾರ ತೆಗೆಯುವ ಹುನ್ನಾರ ನಡೆಯುತ್ತಿದ್ದು, ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ” ಎಂದು ಕಿಡಿಕಾರಿದರು.

“ಹಲವು ಬಾರಿ ಇಂತಹ ಪ್ರಕರಣಗಳಲ್ಲಿ ರಾಜ್ಯಪಾಲರು ಯಾವ ರೀತಿ ನಡೆದುಕೊಳ್ಳಬೇಕು ಎಂದು ನ್ಯಾಯಾಲಯಗಳಲ್ಲಿ ಮಾರ್ಗದರ್ಶನ ನೀಡಲಾಗಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಜಾರ್ಖಂಡ್, ತೆಲಂಗಾಣ, ಪಂಜಾಬ್ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿನ ಪ್ರಕರಣಗಳು ಇದಕ್ಕೆ ಉದಾಹರಣೆಗಳಾಗಿವೆ” ಎಂದರು.

“ಇಂದು ಬೆಳಗ್ಗೆ ರಾಜ್ಯಪಾಲರು ಸಂವಿಧಾನ ವಿರೋಧಿ ಹಾಗೂ ಪ್ರಜಾಪ್ರಭುತ್ವಕ್ಕೆ ಮಾರಕವಾದಿ ತೀರ್ಮಾನ ಮಾಡಿದ್ದಾರೆ. 26-7-2024ರಂದು ರಾಜ್ಯಪಾಲರು ನೀಡಿದ ನೋಟೀಸ್ ಗೆ ನಾವು 1-8-2024 ರಂದು ವಿವರವಾದ ಉತ್ತರ ನೀಡಿದ್ದೆವು. ಅಲ್ಲದೆ ಸಚಿವ ಸಂಪುಟ ಸಭೆ ಮಾಡಿ ದ್ವೇಷದ ಪಿತೂರಿಯ ಈ ದೂರನ್ನು ತಿರಸ್ಕರಿಸುವಂತೆ ಮನವಿ ಮಾಡಿದ್ದೆವು. ಈ ಪ್ರಕರಣದ ಮೂರು ದೂರಿನಲ್ಲಿಯೂ ತಿರುಳಿಲ್ಲ. ಸಂವಿಧಾನ ಹಾಗೂ ಕಾನೂನಿನಲ್ಲಿರುವ ಅಂಶವನ್ನು ವಿವರಿಸಿ ಇದು ರಾಜಕೀಯ ಪ್ರೇರಿತ ದೂರು, ಇದನ್ನು ಪರಿಗಣಿಸಬೇಡಿ. ಜನರು ಆರಿಸಿರುವ ಸರ್ಕಾರಕ್ಕೆ ಮನ್ನಣೆ ಸಿಗಬೇಕು. ನಮ್ಮ ಮುಖ್ಯಮಂತ್ರಿಗಳು ಅಧಿಕಾರ ದುರುಪಯೋಗ ಮಾಡಿಲ್ಲ, ಯಾವುದೇ ಲೋಪದೋಷ ಆಗಿಲ್ಲ ಎಂದು ಸ್ಪಷ್ಟವಾಗಿ ರಾಜ್ಯಪಾಲರಿಗೆ ಹಾಗೂ ಜನರಿಗೆ ತಿಳಿಸಿದ್ದೇವೆ” ಎಂದು ತಿಳಿಸಿದರು.

ರಾಜ್ಯಪಾಲರ ಹುದ್ದೆ ಬಹಳ ದೊಡ್ಡ ಸ್ಥಾನ. ಘನವೆತ್ತ ರಾಜ್ಯಪಾಲರನ್ನು ನಾವೆಲ್ಲರೂ ಗೌರವಿಸುತ್ತೇವೆ. ನಾವು ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇವೆ. ಹೀಗಾಗಿ ನಾವು ಸಂವಿಧಾನದ ಮೌಲ್ಯ ಎತ್ತಿಹಿಡಿಯಲು ಬದ್ಧರಾಗಿದ್ದೇವೆ. ನಾವು ಸಂವಿಧಾನದ ಮೇಲೆ ಪ್ರಮಾಣ ಮಾಡಿ ನಮ್ಮ ಹುದ್ದೆ ಅಲಂಕರಿಸುತ್ತೇವೆ.

ಪ್ರಾಥಮಿಕ ತನಿಖೆ ಇಲ್ಲದೇ ವಿಚಾರಣೆಗೆ ಅನುಮತಿ:

“ನಮ್ಮ ರಾಜಕೀಯ ಅನುಭವದಲ್ಲಿ ಯಾವುದಾದರೂ ತನಿಖೆಗೆ ಅನುಮತಿ ನೀಡಬೇಕಾದರೆ, ಯಾವುದಾದರೂ ತನಿಖಾ ಸಂಸ್ಥೆಯಿಂದ ಪ್ರಾಥಮಿಕ ತನಿಖೆ ನಡೆಸಿ ಆ ತನಿಖೆಯ ವರದಿಯಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿರುವವರ ವಿಚಾರಣೆ ಅಗತ್ಯವಿದೆ ಎಂದು ಮನವರಿಕೆ ಮಾಡಿದ್ದರೆ ಆಗ ವಿಚಾರಣೆ ನಡೆಸಲು ಅನುಮತಿ ನೀಡಬಹುದು. ಆದರೆ ಇಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಪಾಲನೆ ಆಗಿಲ್ಲ. ಈ ಹಿಂದೆಯೂ ಬೇಕಾದಷ್ಟು ಘಟನೆಗಳಿವೆ” ಎಂದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement