ಉಡುಪಿ : ಮಳೆಯಾಶ್ರಿತ ಕೃಷಿ ನೀತಿ ಅನ್ವಯ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮರುಜಾರಿಗೊಳಿಸಲಾಗಿದೆ. ಅದೇ ರೀತಿ ಕೃಷಿ ಭಾಗ್ಯ – ಎಸ್.ಡಿ.ಎಂ.ಎಫ್. ಯೋಜನೆಯನ್ನು ಜಿಲ್ಲೆಯ ಬರ ಪೀಡಿತ ಬ್ರಹ್ಮಾವರ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿದೆ.
ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಘಟಕಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ, ತುಂತುರು (ಹನಿ) ನೀರಾವರಿ ಘಟಕದಡಿ ಎಲ್ಲಾ ವರ್ಗದ ರೈತರಿಗೆ ಶೇ. 90 ರಷ್ಟು ಸಹಾಯಧನ ಹಾಗೂ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ. 40 ಹಾಗೂ ಪರಿಶಿಷ್ಟ ಜಾತಿ / ಪಂಗಡದ ರೈತರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.
ದಾಖಲೆರೈತರು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಪಹಣಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.