ಕೇಂದ್ರ ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಬಿಜೆಪಿಯಿಂದ ಕಲಾಪಕ್ಕೆ ಅಡ್ಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ

ರಾಜ್ಯದ ಬರಗಾಲ ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ದುರುದ್ದೇಶದಿಂದ ರಾಜ್ಯದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ ಕಲಾಪಕ್ಕೆ ತಡೆಯೊಡ್ಡುತ್ತಿದ್ದಾರೆ. ಇವರಿಗೆ ರಾಜ್ಯದ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ, ಜನತೆ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರಿಗೆ ಜನತೆ ಛೀಮಾರಿ ಹಾಕುತ್ತಿರುವುದಕ್ಕೆ ಚುನಾಯಿತ ಪ್ರತಿನಿಧಿಗಳ ಇಂತಹ ಬೇಜವಾಬ್ದಾರಿ ನಡವಳಿಕೆಗಳೇ ಕಾರಣ ಎಂದು ಸಿಎಂ ಸಿದ್ಧರಾಮಯ್ಯ ಅಧಿವೇಶನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ತೆರಿಗೆ ಹಣದಿಂದ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿ ವರ್ಷಕ್ಕೊಂದು ಬಾರಿ ವಿಧಾನಮಂಡಲದ ಅಧಿವೇಶನ ನಡೆಸುತ್ತಿರುವುದರ ಮುಖ್ಯ ಉದ್ದೇಶವೇ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿದೆ. ಇಂತಹ ಚರ್ಚೆಗೆ ಅವಕಾಶವನ್ನೇ ಕೊಡದೆ ಇರುವ ರಾಜ್ಯದ ಬಿಜೆಪಿ ಶಾಸಕರು ತಾವು ಉತ್ತರ ಕರ್ನಾಟಕದ ವಿರೋಧಿಗಳು ಎನ್ನುವುದನ್ನು ಸಾಬೀತು ಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಬರಗಾಲ ಇದೆ. ರಾಜ್ಯ ಸರ್ಕಾರ ಶಕ್ತಿ ಮೀರಿ ಪರಿಹಾರ ಕಾರ್ಯವನ್ನು ನಡೆಸುತ್ತಿದೆ. ರಾಜ್ಯದ 223 ತಾಲ್ಲೂಕುಗಳಲ್ಲಿ ಬರಪರಿಸ್ಥಿತಿ ಇದೆ. ಬರಪರಿಹಾರಕ್ಕಾಗಿ. ರೂ.18,171 ಕೋಟಿ ನೆರವನ್ನು ಕೇಂದ್ರ ಸರ್ಕಾರದಿಂದ ಕೇಳಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಈ ನಷ್ಟಕ್ಕೆ ಪರಿಹಾರ ನೀಡಲು ರೂ.4,663 ಕೋಟಿ ಕೇಳಿದ್ದೇವೆ. ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಬಂದು ಸಮೀಕ್ಷೆ ನಡೆಸಿ, ವರದಿಯನ್ನೂ ಕೂಡಾ ನೀಡಿದೆ. ರಾಜ್ಯ ಸರ್ಕಾರದ ಮನವಿಗೆ ಇಲ್ಲಿಯ ವರೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ನಾವು ಬರೆದ ಪತ್ರಗಳಿಗೆ ಪ್ರತಿಕ್ರಿಯೆ ಇಲ್ಲ. ಪ್ರಧಾನಮಂತ್ರಿಯವರನ್ನು ಭೇಟಿ ಮಾಡಲು ಅವಕಾಶ ಕೇಳಿದರೂ ಕೊಟ್ಟಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

Advertisement

ವಿಧಾನಮಂಡಲದಲ್ಲಿ ಬರಗಾಲದ ಚರ್ಚೆ ನಡೆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಈ ಅನ್ಯಾಯದ ವಿವರಗಳೆಲ್ಲವೂ ಹೊರ ಬಂದು ರಾಜ್ಯದ ಜನರ ಎದುರು ತಲೆತಗ್ಗಿಸುವಂತಾಗುತ್ತದೆ ಎನ್ನುವ ಕಾರಣಕ್ಕಾಗಿಯೇ ಪಿಳ್ಳೆ ನೆಪಗಳನ್ನು ಮುಂದಿಟ್ಟು ರಾಜ್ಯದ ಬಿಜೆಪಿ ಶಾಸಕರು ಧರಣಿ ನಡೆಸಿ ಕಲಾಪ ನಡೆಯದಂತೆ ತಡೆಯೊಡ್ಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಇದನ್ನೆಲ್ಲ ಗಮನಿಸುತ್ತಿದ್ದಾರೆ ಎಂದರು.

ಸಾಮಾನ್ಯವಾಗಿ ಆಡಳಿತ ಪಕ್ಷಗಳು ವಿರೋಧ ಪಕ್ಷಗಳನ್ನು ಎದುರು ಹಾಕಿಕೊಳ್ಳಲು ಹಿಂದೇಟು ಹಾಕುತ್ತದೆ. ನಮ್ಮ ರಾಜ್ಯದಲ್ಲಿ ವಿರೋಧಪಕ್ಷಗಳಿಗೆ ಆಡಳಿತ ಪಕ್ಷವನ್ನು ಎದುರಿಸುವ ಧೈರ್ಯವೇ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರಂತೆ ನಾವೇನು ವಿರೋಧಪಕ್ಷವನ್ನೇ ನಿರ್ನಾಮ ಮಾಡುವ ಬಗ್ಗೆ ಮಾತನಾಡುವುದಿಲ್ಲ. ಒಂದು ಸಮರ್ಥ ವಿರೋಧ ಪಕ್ಷ ಇರಬೇಕು ಎಂದು ಬಯಸುವವರು ನಾವು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಅನಗತ್ಯವಾದ ಧರಣಿಯನ್ನು ಕೈಬಿಟ್ಟು ಕಲಾಪದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement