ನವದೆಹಲಿ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಯೋಜನೆಯನ್ನ ಘೋಷಣೆ ಮಾಡಿದ್ದಾರೆ.
ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮುಂದಿನ ಐದು ವರ್ಷಕ್ಕೆ ವಿಸ್ತರಿಸಲಾಗುವುದು ಎಂದು ಮೋದಿ ಘೋಷಿಸಿದ್ದಾರೆ.
ಛತ್ತೀಸ್‌ಗಢದಲ್ಲಿ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವು ಮುಂದಿನ 5 ವರ್ಷಗಳವರೆಗೆ ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರವನ್ನು ಒದಗಿಸುವ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದರು. ನಿಮ್ಮ ಪ್ರೀತಿ ಮತ್ತು ಆಶೀರ್ವಾದವು ಯಾವಾಗಲೂ ಒಳ್ಳೆ ನಿರ್ಧಾರಗಳನ್ನು ತೆಗೆದುಕೊಳ್ಳಲು ನನಗೆ ಶಕ್ತಿಯನ್ನು ನೀಡುತ್ತದೆ ಎಂದು ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಕಾಂಗ್ರೆಸ್ ಆರ್ಥಿಕ ಲಾಭಗಳಿಗೆ ಆದ್ಯತೆ ನೀಡುತ್ತಿದೆ ಮತ್ತು ಆಗಾದ ಭ್ರಷ್ಟ ಚಟುವಟಿಕೆಗಳಲ್ಲಿ ತೊಡಗಿದೆ. ಆದರೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ದೇಶದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಪರಿಚಯಿಸಲಾಯಿತು.. ಇದರ ಅಡಿಯಲ್ಲಿ ಸರ್ಕಾರವು ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ಪೂರೈಸುತ್ತಿದೆ ಎಂದರು.