ರಾಮನಗರ: ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಬಗ್ಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಚನ್ನಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಿಖಿಲ್ ಎರಡು ಬಾರಿ ಸೋತು ಅವನು ಅನುಭವಿಸುತ್ತಿರುವ ನೋವು ಏನೆಂದು ನನಗೆ ಮಾತ್ರ ಗೊತ್ತು. ಹೀಗಾಗಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಅವನನ್ನು ಕಣಕ್ಕಿಳಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಚನ್ನಪಟ್ಟಣ ಬೈ ಎಲೆಕ್ಷನ್‌ಗೆ ಸಿ.ಪಿ.ಯೋಗೇಶ್ವರ್ ಆಗಬಹುದು. ಇಲ್ಲ ಜೆಡಿಎಸ್ ನವರೇ ಆಗಬಹುದು, ಎನ್ ಡಿಎ ಅಭ್ಯರ್ಥಿ ಯಾರೇ ಆದರೂ ನಾವು ಒಗ್ಗೂಡಿ ಕೆಲಸ ಮಾಡೋಣ ಎಂದು ಹೇಳಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ ಅವರ ಲೋಕಸಭಾ ಸ್ಪರ್ಧೆಯ ಕಾರಣದಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಈ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಇದೀಗ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದು, ಎಲ್ಲಾ ಗಾಳಿ ಸುದ್ದಿಗಳಿಗೆ ತೆರೆ ಎಳೆದಿದ್ದಾರೆ.