ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಇದರೊಂದಿಗೆ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹೊಸತೊಂದು ರಣ ತಂತ್ರವನ್ನೇ ಹೆಣೆದಂತೆ ಕಾಣುತ್ತಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೂಡಿಗೆರೆಯ ಮಾಜಿ ಶಾಸಕರಾದ ಎಂ.ಪಿ. ಕುಮಾರಸ್ವಾಮಿ ಮತ್ತು ಶಿರಹಟ್ಟಿಯ ರಾಮಪ್ಪ ಲಮಾಣಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲು ತೀರ್ಮಾನಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಜಿ ಶಾಸಕರಾದ ಎಂ.ಪಿ. ಕುಮಾರಸ್ವಾಮಿ ಮತ್ತು ರಾಮಪ್ಪ ಲಮಾಣಿ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದರು. ಇದೀಗ ಈ ಇಬ್ಬರು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಬಿಜೆಪಿ ಶಾಸಕರಾಗಿದ್ದ ಕುಮಾರಸ್ವಾಮಿ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಬಿಜೆಪಿಯಿಂದ ಮುನಿಸಿಕೊಂಡು ಜೆಡಿಎಸ್ ಸೇರಿದ್ದರು ಕುಮಾರಸ್ವಾಮಿ. ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲುಂಡಿದ್ದರು. ಇದಾದ ಬಳಿಕ ಲೋಕಸಭೆ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ನಿರ್ಧಾರದಿಂದಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎನ್ನಲಾಗಿದೆ.