ಚಿತ್ರದುರ್ಗ ನಗರದ ಕಲ್ಯಾಣಿ, ಕೆರೆಗಳ ಸ್ವಚ್ಛತೆ ಹಾಗೂ ಅಭಿವೃದ್ಧಿಗೆ ಯೋಜನೆ- ಡಿ. ಸುಧಾಕರ್

WhatsApp
Telegram
Facebook
Twitter
LinkedIn

 

 

ಚಿತ್ರದುರ್ಗ: ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿನ ಹಾಗೂ ನಗರಕ್ಕೆ ಹೊಂದಿಕೊಂಡಿರುವ ಕಲ್ಯಾಣಿಗಳು, ಕೆರೆಗಳ ಸ್ವಚ್ಛತೆ ಹಾಗೂ ನೀರು ಕಲುಷಿತವಾಗುವುದನ್ನು ತಡೆಗಟ್ಟಲು ಅಗತ್ಯ ಯೋಜನೆ ರೂಪಿಸಿ, ಜಾರಿಗೊಳಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ವಿವಿಧ ಅಧಿಕಾರಿಗಳೊಂದಿಗೆ ಏರ್ಪಡಿಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮಾತನಾಡಿ, ನಗರದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರಿನಿಂದ ಸಂಭವಿಸಿದ ಅಹಿತಕರ ಘಟನೆಯನ್ನು ಲೋಕಾಯುಕ್ತರು ಗಂಭೀರವಾಗಿ ಪರಿಗಣಿಸಿದ್ದು, ನೀರಿನ ಮೂಲಗಳ ಸ್ವಚ್ಛತೆ, ಕೆರೆ, ಕಲ್ಯಾಣಿ, ಹೊಂಡಗಳ ಸ್ವಚ್ಛತೆಗೆ ಪ್ರಥಾದ್ಯತೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದರು, ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವರು ನಗರ ವ್ಯಾಪ್ತಿಯಲ್ಲಿನ ಸಂತೆಹೊಂಡ, ಮಠದ ಕೆರೆ, ಮಲ್ಲಾಪುರ ಕೆರೆ ಸೇರಿದಂತೆ ವಿವಿಧ ಕಲ್ಯಾಣಿ, ಕೆರೆಗಳು ಹಾಗೂ ಜಿಲ್ಲೆಯಲ್ಲಿನ ಕುಡಿಯುವ ನೀರಿಗಾಗಿ ಬಳಸುವ ಕೆರೆಗಳ ಸ್ವಚ್ಛತೆಗಾಗಿ ಅಗತ್ಯ ಯೋಜನೆ ರೂಪಿಸಬೇಕು,  ಇದಕ್ಕಾಗಿ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಸೂಚನೆ ನೀಡಿದರು.

ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಚಿತ್ರದುರ್ಗದ ಮಠದ ಕೆರೆ, ಬಳಿಕ ಮಲ್ಲಾಪುರ ಕೆರೆ, ಗೋನೂರು ಕೆರೆ, ರಾಣಿ ಕೆರೆ ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಿದೆ.  ಈ ಕೆರೆಗಳು ಕಲುಷಿತವಾಗದಂತೆ ತಡೆಗಟ್ಟುವ ಕಾರ್ಯ ತ್ವರಿತವಾಗಿ ಆಗಬೇಕಿದೆ.  ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ ಪೀರ್ ಅವರು ಮಾತನಾಡಿ, ಚಿತ್ರದುರ್ಗದ ಮಠದ ಕೆರೆ ಅಭಿವೃದ್ಧಿಗಾಗಿ ಈಗಾಗಲೆ ಯೋಜನೆ ರೂಪಿಸಿ, ನೀಲನಕ್ಷೆ ಸಿದ್ಧವಾಗಿರಿಸಿಕೊಳ್ಳಲಾಗಿದೆ ಎಂದರು.

ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮಾತನಾಡಿ, ಕುಂಚಿಗನಾಳ್ ಬಳಿ ನಿರ್ಮಿಸಲಾಗುತ್ತಿರುವ ನೂತನ ಜಿಲ್ಲಾಡಳಿತ ಭವನದ ಕಾಮಗಾರಿ ಭರದಿಂದ ಸಾಗಿದ್ದು, ಕಾಮಗಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ, ಸಂಬಂಧಿಸಿದ ಗುತ್ತಿಗೆದಾರರು ಬರುವ ಮಾರ್ಚ್ ತಿಂಗಳಾಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಹಿರಿಯೂರು ನಗರ ಹಾಗೂ ಚಿತ್ರದುರ್ಗ ನಗರದ ಪ್ರಮುಖ ರಸ್ತೆಯನ್ನು ಹಂತ ಹಂತವಾಗಿ ಅಗಲೀಕರಣಗೊಳಿಸುವ ಕುರಿತಂತೆ ತೀವ್ರ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರಸಭೆ ಪೌರಾಯುಕ್ತೆ ರೇಣುಕಾ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon