ಬೆಂಗಳೂರು: ದಾವಣಗೆರೆಯ ಚನ್ನಗಿರಿ ಪಟ್ಟಣದ ಆರೋಪಿ ಆದಿಲ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಆದಿಲ್ ವಿರುದ್ಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಪೊಲೀಸರು ಆತನನ್ನು ಠಾಣೆಗೆ ಕರೆತಂದಿದ್ದರು. ಠಾಣೆಗೆ ಕರೆತಂದು 7 ನಿಮಿಷದೊಳಗೆ ಆರೋಗ್ಯದಲ್ಲಿ ಏರುಪೇರು ಆಗಿ ಆದಿಲ್ ಮೃತಪಟ್ಟಿದ್ದಾನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಬೆಂಗಳೂರಿನಲ್ಲಿ ಮಾಧ್ಯಮ ಪ್ರತನಿಧಿಗಳೊಂದಿಗೆ ಮಾತನಾಡಿದ ಅವರು, ಮರಣೋತ್ತರ ಪರೀಕ್ಷೆಯಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದರು. “ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂದು ತಿಳಿದುಕೊಂಡು ಪ್ರತಿಭಟನೆ ಮಾಡಿದ್ದಾರೆ. ಪೊಲೀಸ್ ಠಾಣೆಗೆ ನುಗ್ಗುವ ಪ್ರಯತ್ನ ಕೂಡ ಮಾಡಿದ್ದಾರೆ. ಆದರೆ ಯುವಕ ಹೇಗೆ ಮೃತಪಟ್ಟಿದ್ದಾನೆ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗುತ್ತದೆ” ಎಂದು ಹೇಳಿದರು.
ಸಹಜವಾಗಿ ಕಲ್ಲು ತೂರಾಟ ಆದಾಗ ಅಲ್ಲಿರುವ ಪೊಲೀಸರಿಗೂ ಗಾಯಗಳಾಗುತ್ತದೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇಂತಹ ಗುಂಪು ಘರ್ಷಣೆಗಳು, ರೌಡಿಸಂಗಳು ಯಾರನ್ನೂ ಹೇಳಿ ಕೇಳಿ ಮಾಡಲ್ಲ. ಇದ್ದಕ್ಕಿದ್ದಂತೆ ಹೀಗೆ ಮಾಡುತ್ತಾರೆ. ಅಂತಹ ಸಂದರ್ಭದಲ್ಲಿ ಅದನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ. ಏನು ಬೇಕಾದರೂ ಮಾಡಬಹುದು ಅನ್ನೋದನ್ನು ನಾವು ಬಿಡಲ್ಲ. ಪೊಲೀಸ್ ಠಾಣೆಗೆ ಬಂದು ಧಮ್ಕಿ ಹಾಕುವವರನ್ನು ಸುಮ್ಮನೆ ಬಿಡಲು ಆಗುತ್ತಾ?. ಪೊಲೀಸರು ಅಂತವರ ಮೇಲೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.