ಬೆಂಗಳೂರು : ಜೂನ್ 30ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ಗಮನಹರಿಸಬೇಕು. ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆಯ ಮೊದಲ ಅಧಿವೇಶನ ಪರೀಕ್ಷೆ ಜೂ. 30 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ರವರೆಗೆ ನಡೆಯಲಿದೆ. ಎರಡನೇ ಅಧಿವೇಶನದ ಪರೀಕ್ಷೆಯು ಮಧ್ಯಾಹ್ನ 2 ಗಂಟೆಯಿಂದ 4.30 ರವರೆಗೆ ನಡೆಯಲಿದ್ದು, ಪರೀಕ್ಷೆಗೆ ಬರುವ ಪರೀಕ್ಷಾರ್ಥಿಗಳು ಪ್ರವೇಶ ಪತ್ರದ ಜೊತೆ ಕಡ್ಡಾಯವಾಗಿ ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ ಇತರೆ ಯಾವುದಾದರೂ ಗುರುತಿನ ಚೀಟಿಯನ್ನು ತರಬೇಕು.
ಶಿಕ್ಷಕರ ಅರ್ಹತಾ ಪರೀಕ್ಷೆಯು ಎರಡು ಅಧಿವೇಶನಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪದೋಷಗಳಿಗೆ, ಆಕ್ಷೇಪಣೆಗಳಿಗೆ ಅವಕಾಶ ನೀಡದಂತೆ, ಪರೀಕ್ಷಾ ಪಾವಿತ್ರ್ಯತೆಯ ಕಾಪಾಡಲು ಹಾಗೂ ಪರೀಕ್ಷಾ ಸುರಕ್ಷತಾ ದೃಷ್ಟಿಯಿಂದ ಹೆಚ್ಚಿನ ಗಮನಹರಿಸಿ ಕಾರ್ಯನಿರ್ವಹಿಸಬೇಕು. ಕೇಂದ್ರ ಕಚೇರಿಯಿಂದ ಸರಬರಾಜಾಗುವ ಪ್ರಶ್ನೆ ಪತ್ರಿಕೆಗಳು ಹಾಗೂ ಓಎಂಆರ್ ಶೀಟ್ ಬಂಡಲ್‍ಗಳನ್ನು ಜಿಲ್ಲಾ ಖಜಾನೆಯಲ್ಲಿ ಸುರಕ್ಷಿತವಾಗಿಡುವುದು. ಪರೀಕ್ಷಾ ದಿನದಂದು ನಿಗದಿತ ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಯನ್ನು ಮಾರ್ಗಾಧಿಕಾರಿಗಳಿಗೆ ವಿತರಿಸಲು ಕ್ರಮ ವಹಿಸಬೇಕು. ಅವಧಿಗೂ ಮುಂಚೆ ಅಥವಾ ನಿಗಧಿತ ಅವಧಿಗೂ ತಡವಾಗಿ ತೆಗೆಯುವುದು ಮಾಡದೇ, ನಿಗಧಿತ ವೇಳೆಯಲ್ಲಿ ಯಾವುದೇ ರೀತಿಯ ಚರ್ಚೆಗೆ ಗ್ರಾಸವಾಗದಂತೆ ಅಚ್ಚು ಕಟ್ಟಾಗಿ ಕಾರ್ಯನಿರ್ವಹಿಸಬೇಕು,
ಪರೀಕ್ಷಾ ಕೇಂದ್ರಗಳಲ್ಲಿ ಪ್ರಾಥಮಿಕವಾಗಿ ಬೇಕಾಗಿರುವಂತಹ ಮೂಲಭೂತ ಸೌಕರ್ಯಗಳ ಬಗ್ಗೆ ಗಮನಹರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪ್ರಸ್ತುತ ಸಾಂಕ್ರಾಮಿಕ ರೋಗಗಳು ಹರಡುವ ಬೀತಿ ಇರುವುದರಿಂದ ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಉತ್ತಮ ವಾತಾವರಣ ನಿರ್ಮಿಸಬೇಕು. ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಪ್ರಥಮ ಚಿಕಿತ್ಸಾ ಪರಿಕರಗಳೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸುವಂತೆ ಸೂಚನೆ ನೀಡಲಾಗಿದೆ.
ಟಿಇಟಿ ಪರೀಕ್ಷೆಗೆ ಹಾಜರಾಗುವಂತ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಿಸಿ ಬರುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ, ಸಹಿ ಮತ್ತು ಭಾವಚಿತ್ರ ವ್ಯತ್ಯಾಸವಿರುವ ಅಭ್ಯರ್ಥಿಯು ತನ್ನೊಂದಿಗೆ ಆನ್ ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಷಿತ್ರ ಮತ್ತು ಆಧಾರ್ ಕಾರ್ಡ್, ಇಲ್ಲವೇ ಇತರೆ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ತೋರಿಸುವಂತೆ ತಿಳಿಸಲಾಗಿದೆ.