ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯು ಮುಂಬರುವ ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ತಾಟಿಕೊಂಡ ರಾಜಯ್ಯ ನೆಲಕ್ಕೆ ಬಿದ್ದು ಅತ್ತು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜಯ್ಯ ಅವರಿಗೆ ಟಿಕೆಟ್ ನಿರಾಕರಿಸಿದ ಬಿಆರ್‌ಎಸ್ ಪಕ್ಷವು ಮತ್ತೊರ್ವ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಿರಿಯ ಮುಖಂಡ ಕದಿಯಂ ಶ್ರೀಹರಿ ಅವರನ್ನು ಕಣಕ್ಕಿಳಿಸಿದೆ. ಇದರಿಂದ ರಾಜಯ್ಯ ಅವರು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಮುಂದೆ ಮಂಡಿಯೂರಿ ಕುಳಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು 2014 ರಲ್ಲಿ ತೆಲಂಗಾಣ ರಚನೆಯ ಬಳಿಕ ರಾಜಯ್ಯ ಅವರು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಬಳಿಕ ಅವರಿಗೆ ಆರೋಗ್ಯ ಖಾತೆ ನೀಡಲಾಗಿತ್ತು. ಆದರೆ ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ 2015ರಲ್ಲಿ ರಾಜಯ್ಯ ಅವರನ್ನು ಸಂಪುಟದಿಂದ ಕೈಬಿಟ್ಟಿದ್ದರು.
ಈ ಬಾರಿ ತಮ್ಮದೇ ಪಕ್ಷದ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ರಾಜಯ್ಯ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ.