ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಡಿಕೆಶಿ ಅವರು ಸಲ್ಲಿಸಿರುವ ಈ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ನ ನ್ಯಾ. ಬೇಲಾ ತ್ರಿವೇದಿ ಪೀಠ ನಿರಾಕರಿಸಿದೆ. ಇದರೊಂದಿಗೆ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ತಿಳಿಸಿದೆ.
ಪ್ರಕರಣ ರದ್ದುಗೊಳಿಸುವ ಸಂಬಂಧ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು 2023 ರ ಅಕ್ಟೋಬರ್ 19 ರಂದು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಈ ಆದೇಶದ ವಿರುದ್ಧ ಶಿವಕುಮಾರ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಡಿಕೆಶಿ ಅವರ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬೇಲಾ ತ್ರಿವೇದಿ ಪೀಠ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ತಿರಸ್ಕರಿಸಿದೆ. ಜೊತೆಗೆ ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ.