ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡಿ.ಕೆ ಶಿವಕುಮಾರ್ ಉಪಟಳ ಕಡಿಮೆ ಮಾಡಲು ಡಿನ್ನರ್ ಮೀಟಿಂಗ್ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಮ್ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಡುವೆ ಹಗ್ಗಜಗ್ಗಾಟ ನಡೆದೇ ಇದೆ. ವರ್ಗಾವಣೆಗಾಗಿ ದಂಧೆ ಜೋರಾಗಿಯೇ ನಡೆದಿದೆ. ಐಟಿ ದಾಳಿ ಮೂಲಕ ಭ್ರಷ್ಟಾಚಾರಗಳು, ಹಗರಣಗಳು ಬಯಲಿಗೆ ಬರುತ್ತಿವೆ. ಇದನ್ನೆಲ್ಲ ಕಡಿವಾಣ ಹಾಕಲು ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ಲೂಟಿ ಸರಕಾರ ಎಂಬುದು ಸಾಬೀತಾಗಿದೆ ಎಂದು ಆರೋಪಿಸಿದರು. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೋಪಿಸುತ್ತಿದ್ದಾರೆ. ಸಿದ್ದರಾಮಯ್ಯ ಎಲ್ಲದಕ್ಕೂ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಎಟಿಎಂ ಆಗಿರುವುದಕ್ಕೆ ರಾಜ್ಯಕ್ಕೆ ವರಿಷ್ಠರು ಭೇಟಿ ನೀಡುತ್ತಿದ್ದಾರೆ. ಕೆ.ಸಿ.ವೇಣುಗೋಪಾಲ್ ಮತ್ತು ಸುರ್ಜೇವಾಲ ರಾಜ್ಯಕ್ಕೆ ಬಂದಿದ್ದರು. ಎಲೆಕ್ಷನ್ ಟಾರ್ಗೆಟ್ ನೀಡಲು ಅವರಿಬ್ಬರೂ ರಾಜ್ಯಕ್ಕೆ ಬಂದಿದ್ದರು ಎಂದು ಹೇಳಿದರು.