ಚಿತ್ರದುರ್ಗ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಸೇವಾಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ, ಹಿಂದಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಸಮುದಾಯಗಳಿಗೆ ಅನ್ವಯವಾಗುತ್ತದೆ.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೋಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ನಿಗಮದ ಯೋಜನೆಗಳಲ್ಲಿ ಒಂದು ಬಾರಿ ಯಾವುದಾದರು ಯೋಜನೆಯ ಪ್ರಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿತರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಸೌಲಭ್ಯಗಳನ್ನು ಪಡೆಯಲು ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.dbcdc.karnatak.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080-22374832, 850770004 ಮತ್ತು 8050770005 ಅಥವಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಡಿ.ಬಿ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.


































