ಬೆಂಗಳೂರು: ಕಳೆದ 123 ವರ್ಷಗಳಲ್ಲೇ ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸರ್ವಪಕ್ಷದ ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ತಮಿಳುನಾಡಿಗೆ ಇನ್ನೂ 15 ದಿನ ನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕರೆಯಲಾಗಿತ್ತು.
ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಬರ ಇದೆ. ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಕೊರತೆಯಾಗಿದೆ. ಡ್ಯಾಂಗಳಲ್ಲಿ ನೀರಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗುವ ಸಾಧ್ಯತೆ ಇದೆ. ಇಂತಹ ಸಂದಿಗ್ಥ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದರು.
ತಮಿಳುನಾಡಿಗೆ ನಿತ್ಯ 5000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ನೀಡಿದೆ. ಇದನ್ನು ಮರು ಪರಿಶೀಲನೆ ಮಾಡುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ. ವಸ್ತುಸ್ಥಿತಿ ವಿವರಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೆ ಪತ್ರ ಬರೆಯುತ್ತೇವೆ ಎಂದು ಸಿಎಂ ತಿಳಿಸಿದರು.