ಮೈಸೂರು: ದಸರಾ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ. ಅದಕ್ಕಾಗಿ ದಿನಾಂಕ ಈಗಾಗಲೇ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಭಾನುವಾರ ಮಾತನಾಡಿದ ಅವರು, ‘ಮುಡಾ ಹಗರಣದ ವಿರುದ್ಧ ಮೈತ್ರಿಕೂಟದಿಂದ ಹಮ್ಮಿಕೊಂಡಿದ್ದ ಪಾದಯಾತ್ರೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ರಾಜೀನಾಮೆ ಕೊಟ್ಟೇ ಕೊಡುತ್ತಾರೆ. ಇದಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯುತ್ತೇನೆ ಎಂದು ನಿತ್ಯವೂ ಹೇಳಿಕೊಳ್ಳುವ ಕೆಟ್ಟ ಪರಿಸ್ಥಿತಿ ಸಿದ್ದರಾಮಯ್ಯ ಅವರಿಗೆ ಬಂದಿದೆ. ಅವರನ್ನು ಬೆಂಬಲಿಸಿ ಸಚಿವರೂ ಹೇಳಿಕೆ ನೀಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.
‘ಸಚಿವ ಸತೀಶ ಜಾರಕಿಹೊಳಿ ಅವರನ್ನು ಸಿದ್ದರಾಮಯ್ಯ ಅವರೇ ದೆಹಲಿಗೆ ಕಳುಹಿಸಿಕೊಟ್ಟಿದ್ದಾರೆ. ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ಕೊಡಬಹುದು. ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲೂ ಈ ಕುರಿತು ಚಿಂತನೆ ನಡೆದಿದೆ. ಇದು ಮುಖ್ಯಮಂತ್ರಿಗೂ ಗೊತ್ತಿದೆ. ಸಿಎಂ ಸ್ಥಾನಕ್ಕೆ 7–8 ಮಂದಿ ಕಾಯುತ್ತಿದ್ದಾರೆ’ ಎಂದರು.