ತಿರುವನಂತಪುರಂ : ಶಬರಿಮಲೆ ಸ್ವಾಮಿ ಅಯ್ಯಪ್ಪ ಸ್ವಾಮಿ ಭಕ್ತರು ಎಚ್ಚರ ವಹಿಸುವಂತೆ ಕೇರಳ ಸರ್ಕಾರ ಮನವಿ ಮಾಡಿದೆ. ಕೇರಳದಲ್ಲಿ ಈಶಾನ್ಯ ಮುಂಗಾರು ಮತ್ತೆ ಚುರುಕಾಗಿದ್ದು, ಈ ಹಿನ್ನೆಲೆಯಲ್ಲಿ ಇಡುಕ್ಕಿ ಮತ್ತು ಪತ್ತನಂತಿಟ್ಟ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಗುರುವಾರದವರೆಗೆ ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕನ್ಯಾಕುಮಾರಿ ಪ್ರದೇಶ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ಚಂಡಮಾರುತದ ಪ್ರಭಾವದಿಂದಾಗಿ ಈ ಮಳೆಯು ಸುರಿಯಲಿದೆ ಎಂದು ತಿಳಿದುಬಂದಿದೆ. ತಿರುವನಂತಪುರಂ, ಕೊಲ್ಲಂ ಮತ್ತು ಎರ್ನಾಕುಲಂ ಜಿಲ್ಲೆಗಳಿಗೆ ಎಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತಿರುವನಂತಪುರಂ, ಪತ್ತನಂತಿಟ್ಟ ಮತ್ತು ಇಡುಕ್ಕಿಯ ಗುಡ್ಡಗಾಡು ಪ್ರದೇಶಗಳಲ್ಲಿ ಮಳೆಯಾಗಿದೆ. ಭಕ್ತರ ದಂಡು ಹರಿದು ಬರುತ್ತಿರುವ ಶಬರಿಮಲೆಯಲ್ಲೂ ಭಾರಿ ಮಳೆಯಾಗಿದೆ. ಮಂಡಲ-ಮಕರವಿಳಕ್ಕು ಋತುವಿನಲ್ಲಿ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಶಬರಿಮಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.