ದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ

ಬೆಂಗಳೂರು: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸಂಸದರ ಅಮಾನತು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ, ಮಾತನಾಡಿದ ಅವರು,ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ.

ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತು ಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ.

Advertisement

ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ.

ಸ್ಪೀಕರ್ ಅವರ ಬಳಿ ಕಾಗದ ಹರಿದಿದ್ದಾರೆ ಎಂದು ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಿದ್ದಾರೆ. ಆಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ.

ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ, ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು.

ಹೀಗಾಗಿ ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ನಮ್ಮ ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿರೋಧ ಪಕ್ಷದ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಅವರು ಹೊರಗೆ ಪ್ರತಿಭಟನೆ ಮಾಡಿದ್ದರು. ಜನ ಸದನದ ಒಳಗೆ ಚರ್ಚೆ ಮಾಡಲು ಬಿಜೆಪಿಯ 65 ನಾಯಕರನ್ನು ಆರಿಸಿ, ಕಳುಹಿಸಿದ್ದಾರೆ.

ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳ ನಾಯಕರು ಎತ್ತುತ್ತಿದ್ದಾರೆ. ಶೇ.98 ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ ಎಂದು ಹೇಳಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement